ಜಾರಕಿಹೊಳಿಗೆ ಇಡಿ ಶಾಕ್. ಆಫ್ರಿಕಾದಲ್ಲಿ ಗಣಿಗಾರಿಕೆ ಕಂಪನಿ – ಪುತ್ರ, ಸಹೋದರಿ ನಿರ್ದೇಶಕರು’
ಬೆಂಗಳೂರು True Media Kannada: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ದಾಳಿಯ ಹಿಂದಿನ ಪ್ರಮುಖ ಕಾರಣಗಳು ಇದೀಗ ಬೆಳಕಿಗೆ ಬಂದಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ ವಿದೇಶದಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದೆ ಎನ್ನಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಸತೀಶ್ ಜಾರಕಿಹೊಳಿ ಅವರು ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವ್ಯವಹಾರದಲ್ಲಿ ಭಾರಿ ಮೊತ್ತದ ಹಣ ಹೂಡಿಕೆ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಆಫ್ರಿಕಾದಲ್ಲಿ ಅಸ್ತಿತ್ವದಲ್ಲಿರುವ ಗಣಿಗಾರಿಕೆ ಕಂಪನಿಯೊಂದರಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ನಿರ್ದೇಶಕರಾಗಿದ್ದು, ಸತೀಶ್ ಜಾರಕಿಹೊಳಿ ಅವರ ಸಹೋದರಿ ಲಕ್ಷ್ಮಿ ಕೂಡ ನಿರ್ದೇಶಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಮಾರ್ಗಗಳ ಮೂಲಕ ವಿದೇಶಕ್ಕೆ ಹಣ ವರ್ಗಾವಣೆ ಮಾಡಿ, ಕುಟುಂಬಸ್ಥರ ಹೆಸರಿನಲ್ಲಿ ವಿದೇಶಿ ಕಂಪನಿಗಳನ್ನು ಸ್ಥಾಪಿಸಿರುವ ಸಾಧ್ಯತೆಯ ಕುರಿತು ಇಡಿ ಅಧಿಕಾರಿಗಳು ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮಗಳಿಗೆ ನೀಡುವ ಮಾಹಿತಿಯಲ್ಲಿ ಈ ಹೂಡಿಕೆ ಹಾಗೂ ವಿದೇಶಿ ಕಂಪನಿಗೆ ಸಂಬಂಧಿಸಿದಂತೆ ಮತ್ತಷ್ಟು ವಿವರಗಳು ಬಹಿರಂಗವಾಗುವ ಸಾಧ್ಯತೆಯಿದೆ..
