ಇ.ಡಿ. ದಾಳಿ ಖಂಡಿಸಿ ಹರಿಹರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಹರಿಹರ 10.09.2026 True Media Kannada: ಕರ್ನಾಟಕ ಸರ್ಕಾರದ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ನಡೆಸಿದ ದಾಳಿ ಹಾಗೂ ಪರಿಶೀಲನೆಯನ್ನು ಖಂಡಿಸಿ ಹರಿಹರ ನಗರದ ಮುಖ್ಯವೃತ್ತದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ನಗರ ಬ್ಲಾಕ್ ಕಾಂಗ್ರೆಸ್, ಮಲೇಬೆನ್ನೂರು ಬ್ಲಾಕ್ ಕಾಂಗ್ರೆಸ್ ಹಾಗೂ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು.
ಈ ವೇಳೆ ಪ್ರತಿಭಟನಾಕಾರರು ಇ.ಡಿ. ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿ, ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ ಎಂಬ ಆರೋಪ ಮಾಡಿದರು.
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಜಕೀಯ ಒತ್ತಡದ ಬದಲು ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಹನುಮಂತಪ್ಪ, ಅಬೀದಾಲಿ, ಕಾಂಗ್ರೆಸ್ ಮುಖಂಡ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು ಭಾಗವಹಿಸಿದ್ದರು.
