Harihara
ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ; ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ಪಾಟೀಲ್
True Media Kannada:ಹರಿಹರದಲ್ಲಿ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ | ಮೊದಲ ದಿನವೇ 23 ಅರ್ಜಿಗಳ ಸ್ವೀಕಾರ
ಹರಿಹರ, ಸೆ.19: ಸಮಾಜದ ಕಟ್ಟಕಡೆಯ ಬಡವರು ಹಾಗೂ ಜನಸಾಮಾನ್ಯರಿಗೆ ಸ್ವಾಭಿಮಾನದ ಬದುಕು ರೂಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಸದಾ ಬದ್ಧವಾಗಿದೆ ಎಂದು ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಪಾಟೀಲ್ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನೂತನ ಪ್ರಜಾ ಸೇವಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಸರ್ಕಾರದ ಆದೇಶದಂತೆ ಬಡವರು ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅವರ ಕುಂದುಕೊರತೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾ ಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ.
ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಈ ಆಂದೋಲನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಾಯಿಸಿ ಕೊಳ್ಳುವ ಮೂಲಕ ಪರಿಹಾರ ಪಡೆಯಬಹುದಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿ ಜನರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹರಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ಜನರು ತಮ್ಮ ಕುಂದುಕೊರತೆಗಳು ಹಾಗೂ ವಿವಿಧ ಸಮಸ್ಯೆಗಳ ಕುರಿತು ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಹರಿಹರದಲ್ಲಿ ನಡೆದ ಮೊದಲ ಪ್ರಜಾ ಸೇವಾ ಆಂದೋಲನದಲ್ಲಿ ಒಟ್ಟು 23 ಅರ್ಜಿಗಳು ಸ್ವೀಕರಿಸಲಾಯಿತು. ಇದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 6, ತಾಲೂಕು ಪಂಚಾಯಿತಿಗೆ 6 ಹಾಗೂ ನಗರಸಭೆಗೆ ಸಂಬಂಧಿಸಿದ 5 ಅರ್ಜಿಗಳಿದ್ದವು. ಉಳಿದಂತೆ ಲೋಕೋಪಯೋಗಿ ಇಲಾಖೆ, ಬೆಸ್ಕಾಂ, ಧೂಡಾ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ಹಾಗೂ ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ತಲಾ ಒಂದು ಅರ್ಜಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜಿ. ಸಂತೋಷ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ. ಸುಮಲತಾ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ದುರುಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಬಾಕ್ಸ್ ಕಾಲಮ್ ಗಾಗಿ(ಫೋಟೋ ಇದೆ)
ಕ್ಷೇತ್ರದ ಸಾರ್ವಜನಿಕರಿಗೆ ಪ್ರಜಾ ಸೇವಾ ಆಂದೋಲನದ ಮೂಲಕ ಅವರ ಸಮಸ್ಯೆಗಳನ್ನು ಹೇಳಿಕೊಳ್ಳಲು ಉತ್ತಮವಾದ ಕೆಲಸವನ್ನು ತಾಲೂಕ ಆಡಳಿತ ಮಾಡುತ್ತಿದೆ. ಸಮಸ್ಯೆಗಳನ್ನು ನೋಂದಣಿಯಾದ ನಂತರ ಸಂಬಂಧಪಟ್ಟ ಇಲಾಖೆಗಳಿಂದ ಸಮಂಜಸವಾದ ಉತ್ತರ ಇಲ್ಲವೇ ಸಮಸ್ಯೆ ಬಗೆಹರಿಯಲಿದೆ.
ಇಂತಹ ಕಾರ್ಯಕ್ರಮಗಳಿಗೆ ನನ್ನನ್ನು ಆಹ್ವಾನಿಸುವುದು ಅಥವಾ ಬಿಡುವುದು ಯಾವುದೇ ಸಕಾರಣವಾಗುವುದಿಲ್ಲ ಸಾರ್ವಜನಿಕರ ಅನುಕೂಲಕ್ಕಾಗಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಯಾವಾಗಲೂ ನನ್ನ ಸಹಮತ ಇದ್ದೇ ಇರುತ್ತದೆ.
