Harihar News
ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ
ಪದವೀಧರರು, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ | ಉಡುಗೊರೆಗಿಂತ ಸಮಸ್ಯೆಗಳ ಪರಿಹಾರವೇ ಮುಖ್ಯ
ಹರಿಹರ True Media Kannada : ಶಿಕ್ಷಣ ಸಂಸ್ಥೆ ಅಥವಾ ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ಅದನ್ನು ಹೊಂದುವ ಉದ್ದೇಶ ನನಗಿಲ್ಲ. ಪದವೀಧರರು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸೇವೆ ಸಲ್ಲಿಸುವ ಉದ್ದೇಶದಿಂದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ಹೇಳಿದರು.
ನಗರದ ಎಚ್ ಕೆ ವಿ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,ಶಾಲಾ-ಕಾಲೇಜು ಗಳಿಗೆ ಭೇಟಿ ನೀಡಿ ಶಿಕ್ಷಕರ ಸಮಸ್ಯೆಗಳನ್ನು ಅರಿತುಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಶಿಕ್ಷಣ ಕ್ಷೇತ್ರದ ವಾಸ್ತವ ಸ್ಥಿತಿಗತಿ ಹಾಗೂ ಪದವೀಧರರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿದುಕೊಂಡಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಸಂಕಲ್ಪ ಹೊಂದಿದ್ದೇನೆ ಎಂದರು.
ಹರಿಹರ ತಾಲ್ಲೂಕಿನಲ್ಲಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಒಟ್ಟು 6,203 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ವಿವಿಧ ಹಂತಗಳಲ್ಲಿ ಮತದಾರರನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸುವ ಕಾರ್ಯ ಮಾಡಲಾಗಿದೆ. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಯುವ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಯಾದರೆ, ಮತದಾರರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸೂಕ್ತ ಪರಿಹಾರ ದೊರಕಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ನಿರುದ್ಯೋಗಿ ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುವುದು, ಶಿಕ್ಷಕರ ಸೇವಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪರಿಣಾಮಕಾರಿಯಾಗಿ ಧ್ವನಿಯಾಗುವುದು ಅಗತ್ಯವಾಗಿದೆ ಎಂದರು.
ಈ ಕ್ಷೇತ್ರದಿಂದ ಈ ಹಿಂದೆ ಹಲವು ಬಾರಿ ಆಯ್ಕೆಯಾಗಿದ್ದ ಬಿಜೆಪಿ ಮತ್ತು ಜೆಡಿಎಸ್ನ ಪ್ರತಿನಿಧಿಗಳು ಮತದಾರರ ಸಮಸ್ಯೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ.ಮತದಾರರಿಗೆ ಪೆನ್ನು, ಬ್ಯಾಗ್ ಅಥವಾ ಭಗವದ್ಗೀತೆಯಂತಹ ಉಡುಗೊರೆಗಳನ್ನು ನೀಡುವುದಕ್ಕಿಂತ ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುವುದು ಮುಖ್ಯ ಇದರಿಂದ ನಿರುದ್ಯೋಗಿ ಪದವೀಧರರು ಹಾಗೂ ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ಅವರು ಆರೋಪಿಸಿದರು.
ಮುಂದಿನ ಒಂದೂವರೆ ವರ್ಷ ನಮ್ಮ ಸರ್ಕಾರ ಅಧಿಕಾರದಲ್ಲಿರುವುದರಿಂದ, ಪದವೀಧರರು ಮತ್ತು ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಸರ್ಕಾರದ ಗಮನಕ್ಕೆ ತಂದು ಹಂತ ಹಂತವಾಗಿ ಪರಿಹರಿಸಲು ಪ್ರಯತ್ನಿಸುವ ಕೆಲಸವನ್ನು ಖಂಡಿತವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಎಸ್.ರಾಮಪ್ಪ ಇದೇ ವೇಳೆ ಮಾತನಾಡಿ
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠರ ಗೆಲುವಿಗೆ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಮನೆ ಮನೆಗೆ ತೆರಳಿ ನೋಂದಾಯಿತ ಮತದಾರರನ್ನು ಸಂಪರ್ಕಿಸಿ, ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ಕೊಡಿಸುವ ಮೂಲಕ ಗೆಲುವಿನ ಹಾದಿಯನ್ನು ಸುಗಮಗೊಳಿಸಬೇಕು ಎಂದು ಕರೆ ನೀಡಿದರು
ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕು. ಅಭ್ಯರ್ಥಿಯ ಗೆಲುವನ್ನೇ ತಮ್ಮ ಗೆಲುವು ಎಂದು ಭಾವಿಸಿ, ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು.ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಬರುವ ನೋಂದಾಯಿತ ಮತದಾರರನ್ನು ನೇರವಾಗಿ ಭೇಟಿ ಮಾಡಿ, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಯಾಚಿಸಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಖಲೀಲ್ ಉಲ್ಲಾ ಮಾತನಾಡಿ ಹರಿಹರ ನಗರ ವ್ಯಾಪ್ತಿಯಲ್ಲಿ 3,500 ಹಾಗೂ ಗ್ರಾಮೀಣ ಪ್ರದೇಶದಲ್ಲಿ 2,703 ಮತದಾರರು ಸೇರಿದಂತೆ ಒಟ್ಟು 6,203 ಮಂದಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನೋಂದಾಯಿಸಿ ಕೊಂಡಿದ್ದಾರೆ. ಈ ಕ್ಷೇತ್ರವು ಐದು ಜಿಲ್ಲೆಗಳ 33 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ ಅಭ್ಯರ್ಥಿಯೊಬ್ಬರು ಪ್ರತಿಯೊಂದು ತಾಲೂಕಿಗೂ ತೆರಳಿ ಎಲ್ಲ ಮತದಾರರನ್ನು ವೈಯಕ್ತಿಕವಾಗಿ ಭೇಟಿಯಾಗುವುದು ಸುಲಭವಲ್ಲ. ಹೀಗಾಗಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಅಭ್ಯರ್ಥಿಗಳಂತೆ ಜವಾಬ್ದಾರಿ ವಹಿಸಿಕೊಂಡು ಮತಯಾಚಿಸಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ನಂದಿಗಾವಿ ಶ್ರೀನಿವಾಸ್, ಕೆಪಿಸಿಸಿ ಸದಸ್ಯ ಬಿ. ರೇವಣಸಿದ್ದಪ್ಪ, ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ನಿಖಿಲ್ ಕೊಂಡಜ್ಜಿ, ಜಿಲ್ಲಾ ಸಹಕಾರಿ ಸಂಘದ ಡಿ. ಕುಮಾರ ಹಾಗೂ ಕುಂಬಳೂರು ವಿರೂಪಾಕ್ಷಪ್ಪ ಮುಂತಾದವರು ಮಾತನಾಡಿ, ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡುವುದರ ಜತೆಗೆ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಮಲೆಬೆನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಭಿದ್ ಅಲಿ, ದಾದಾಪೀರ್ ಭಾನುವಳ್ಳಿ, ಕೊಟ್ರೇಶ್ ನಾಯಕ್, ಬೆಳ್ಳೂಡಿ ದಂಡೆಪ್ಪ, ಶ್ರೀನಿವಾಸಮೂರ್ತಿ, ಹನುಮಂತಪ್ಪ ಎಚ್. ಸಂಗಣ್ಣನವರ್, ಮಧುಸೂದನ್, ಸಚಿನ್ ಕೊಂಡಜ್ಜಿ, ಭಾಗ್ಯಮ್ಮ, ಸವಿತಾ ನಾಯಕ್, ಮಾಜಿ ನಗರಸಭಾ ಸದಸ್ಯ ಎಂ.ಎಸ್. ಬಾಬುಲಾಲ್, ಫೈರೋಜ್, ಕೆ.ಪಿ. ಗಂಗಾಧರ್, ಅಬು ತಾಹೀರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
