ಜುಲೈ 10-ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.
K-CET 2020 ಪರೀಕ್ಷೆ ಗಳು ನಿಗದಿಯಂತೆ ಇದೇ ತಿಂಗಳ ಜೂಲೈ 30 ಮತ್ತು 31 ರಂದು ನಡೆಯಲಿವೆ.
ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. 2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದರು.
